ಗೋಕಾಕ:ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ : ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ : ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 29 :
ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ವಿಶೇಷಾಧಿಕಾರಿಗಳನ್ನು ನೇಮಿಸುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹು ಮುಖ್ಯವಾಗಿದೆ. ಆದರೆ ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆಗಳು ಮತ್ತಿತರ ಕಡೆಗಳಲ್ಲಿ ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆ ಆಗದಿರುವುದು ಕಂಡುಬಂದಿದೆ. ಆದ್ದರಿಂದ ಕೋವಿಡ್ ಮಾರ್ಗಸೂಚಿ ಅನುಷ್ಠಾನದ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷಾಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳನ್ನು ಹಾಗೂ ನಗರ ಪ್ರದೇಶಗಳಲ್ಲಿ ನಗರ ಸಭೆ/ಪುರಸಭೆಗಳ ಅಧಿಕಾರಿಗಳನ್ನು ನೇಮಿಸಲಾಗಿದೆ. ಹೀಗೆ ನೇಮಿಸಿದ ವಿಶೇಷಾಧಿಕಾರಿಗಳು ಗ್ರಾಮ ಲೆಕ್ಕಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಇತರೆ ಸಿಬ್ಬಂದಿಯೊಂದಿಗೆ ತಮಗೆ ನಿಗದಿಪಡಿಸಿದ ವ್ಯಾಪ್ತಿಯಲ್ಲಿ ಸರಕಾರ ಕಾಲಕಾಲಕ್ಕೆ ಹೊರಡಿಸುವ ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ಖಚಿತಪಡಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದು ತಿಳಿಸಲಾಗಿದೆ.
ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸಂಪೂರ್ಣ ಮುಂಜಾಗ್ರತೆ ವಹಿಸಲು ಮತ್ತು ಸಹಕಾರ ನೀಡಲು ಪ್ರಕಾಶ ಪ್ರಕಟಣೆಯಲ್ಲಿ ಕೋರಿದ್ದಾರೆ.
